ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳಾದ ನೌಫಲ್ (28), ಸೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್ ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ (ಯುಎಪಿಎ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ ಐಎಗೆ ವರ್ಗಾಯಿಸಲಾಗಿತ್ತು.
ಏನಿದು ಘಟನೆ:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಪ್ರವೀಣ್ ಮೃತಪಟ್ಟಿದ್ದರು.










