ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದು, ಅದಕ್ಕೆ ಒಂದು ದಿನ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೆಲಮಂಗಲಕ್ಕೆ ಆಗಮಿಸುತ್ತಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ನಿರ್ಮಾಣವಾಗಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನದ ಉದ್ಘಾಟನೆಗೆ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಆಗಮಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಮಹದೇವಪುರದಲ್ಲಿ ಈ ಕ್ಷೇಮವನವನ್ನು ನಿರ್ಮಾಣ ಮಾಡಲಾಗಿದೆ. ಇಂದು ಬೆಳಗ್ಗೆ ಉತ್ತರ ಪ್ರದೇಶದಿಂದ ಹೊರಟು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಅಗಮಿಸಲಿದ್ದಾರೆ.
ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಮಂಗಳೂರಿನಲ್ಲಿ ಮೋದಿ ಸುಮಾರು 3,800 ಕೋಟಿ ರೂಪಾಯಿ ವೆಚ್ಚದ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್ ಪೋರ್ಟ್ ಗೆ ಮೋದಿ ಬಂದಿಳಿಯಲಿದ್ದಾರೆ.










