ಚಿತ್ರದುರ್ಗ : ಪೋಕ್ಸೋ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಅವರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಇಂದು ಬೆಳಗ್ಗೆ ಶ್ರೀಗಳ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಾಸ ಕಾಣಿಸಿಕೊಂಡಿದೆ. ಹೀಗಾಗಿ, ಜೈಲು ಸಿಬ್ಬಂದಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತಂದರು. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಮೂವರು ವೈದ್ಯರ ನೇತೃತ್ವದಲ್ಲಿ ಶ್ರೀಗಳ ಆರೋಗ್ಯ ತಪಾಸಣೆ ನಡೆಯುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಗಳಿವೆ.
ಮುರುಘಾ ಶ್ರೀ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾ ಆಸ್ಪತ್ರೆಯತ್ತ ಜನರ ದಂಡು ಹರಿದು ಬರುತ್ತಿದೆ. ಆಸ್ಪತ್ರೆಯತ್ತ ಭಕ್ತಾದಿಗಳ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.










