ದಲಿತ ಸಹೋದರಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಅತ್ಯಾಚಾರ, ಕೊಲೆ ಶಂಕೆ…

53
firstsuddi

ಲಕ್ನೋ : ಇಬ್ಬರು ದಲಿತ ಸಹೋದರಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯರನ್ನು ಅಪಹರಿಸಿ, ಅತ್ಯಾಚಾರ ಎಸಗಿ, ನಂತರ ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಡುಗಿಯರು ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮಿ ಸಿಂಗ್ ಅವರು ಮಾಹಿತಿ ನೀಡಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೊತೆಗೆ ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಅತ್ಯಾಚಾರ ಮತ್ತು ಕೊಲೆಯ ಸೆಕ್ಷನ್ ಗಳನ್ನು ಹಾಕಲಾಗಿದೆ. ಬಂಧಿತರನ್ನ ಚೋಟೂ, ಜುನೈದ್, ಸುಹೈಲ್, ಕರೀಮ್​ದ್ದೀನ್​, ಆರೀಫ್ ಮತ್ತು ಹಫೀಜ್ ಎಂದು ಗುರುತಿಸಲಾಗಿದೆ.

ಇನ್ನೂ ಘಟನೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು, ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯೋಗಿ ಸರ್ಕಾರದಲ್ಲಿ ಗೂಂಡಾಗಳು ಪ್ರತಿದಿನ ತಾಯಂದಿರು, ಸಹೋದರಿಯರಿಗೆ ಕಿರುಕುಳ ನೀಡ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.