ತಿರುವನಂತಪುರಂ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ 2,000 ರೂ. ದೇಣಿಗೆ ನೀಡುವಂತೆ ತರಕಾರಿ ವ್ಯಾಪಾರಿಯೊಬ್ಬರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾರ್ಯಕರ್ತರನ್ನು ಅಮಾನತು ಮಾಡಲಾಗಿದೆ.
ಭಾರತ್ ಜೋಡೋ ಯಾತ್ರೆಗಾಗಿ 2 ಸಾವಿರ ರೂಪಾಯಿ ದೇಣಿಗೆ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಕೊಲ್ಲಂನ ತರಕಾರಿ ಅಂಡಿಯೊಂದಕ್ಕೆ ತೆರಳಿ ಅಂಗಡಿ ಮಾಲೀಕನೊಂದಿಗೆ ಕೇಳಿದ್ದಾರೆ. ಆದರೆ ವ್ಯಾಪಾರಿಯು 500 ರೂಪಾಯಿ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಈ ಸಮಯದಲ್ಲಿ ವ್ಯಾಪಾರಿ ಹಾಗೂ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದಿದ್ದು, ತೂಕದ ಯಂತ್ರ ಧ್ವಂಸಗೊಂಡಿದೆ ಎಂದು ವರದಿಯಾಗಿದೆ.
ಅಲ್ಲದೆ ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮಾಲೀಕರ ಬಳಿ ಬಂದು ದೇಣಿಯಾಗಿ 2,000 ರೂ. ಕೊಡುವಂತೆ ಕೇಳಿದ್ದಾರೆ. ಇದಕ್ಕೆ ಅಂಗಡಿ ಮಾಲೀಕರು ಒಪ್ಪದೆ ತಾವು 500 ರೂ. ಕೊಡುವುದಾಗಿ ತಿಳಿಸಿದ್ದಾರೆ. ಬಳಿಕ ಜಗಳ ಆರಂಭಗೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಏರು ಧ್ವನಿಯಲ್ಲಿ ಅಂಗಡಿ ಮಾಲೀಕನಿಗೆ ದಮ್ಕಿ ಹಾಕಿದ್ದಾರೆ.
ಇದೀಗ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅವರು ನಮ್ಮ ಸಿದ್ಧಾಂತಗಳನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಅವರ ಈ ವರ್ತನೆ ಅಕ್ಷಮ್ಯ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ. ಸುಧಾಕರನ್ ಟ್ವೀಟ್ ಮಾಡಿದ್ದಾರೆ.










