ಮುಂಬೈ : ಟ್ರಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿ ಹೊತ್ತಿಕೊಂಡು 11 ಜನರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.
ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5:15ರ ಸುಮಾರಿಗೆ ದುರಂತ ಸಂಭವಿಸಿದೆ. ನಾಸಿಕ್ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‍ಗೆ, ಯವತ್ಮಾಲ್ನಿಂದ ಮುಂಬೈಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 21 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಸದ್ಯಕ್ಕೆ 11 ಜನರು ಮೃತಪಟ್ಟ ಬಗ್ಗೆ ಮಾಹಿತಿ ಸಿಕ್ಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಲ್ಲಾ ಗಾಯಾಳುಗಳಿಗೆ ನಾಸಿಕ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಗೊಂಡವರ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ನಾಸಿಕ್ ಜಿಲ್ಲಾ ಉಸ್ತುವಾರಿ ಸಚಿವ ದಾದಾ ಭೂಸೆ ತಿಳಿಸಿದ್ದಾರೆ. ಇನ್ನು ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸಿಎಂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.










