ಬೆಂಗಳೂರು : ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯ ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸುವ ಕುರಿತಂತೆ ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿದ ನ್ಯಾಯಪೀಠ, ಮೂರು ವಾರಗಳಲ್ಲಿ ಪ್ರತಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿವಿಧಾನ ನೆರವೇರಿಸಲು ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಆದೇಶಿಸಿತ್ತು. ಆದರೆ ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿ ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕೆಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.










