ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2070 ಜಾನುವಾರುಗಳು ಮರಣ ಹೊಂದಿವೆ. ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಸೂಚಿಸಿದರು.
ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಸೂಚಿಸಿದರಲ್ಲದೆ, ಕೂಡಲೇ 15 ಲಕ್ಷ ಡೋಸ್ ಲಸಿಕೆಗಳನ್ನು ಒದಗಿಸುವಂತೆ ತಿಳಿಸಿದರು. ಲಸಿಕೆ ಪೂರೈಕೆ ಕುರಿತು ಭಾರತ ಸರ್ಕಾರ ಅನುಮೋದಿಸಿದ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳಿ, ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.










