ಮಂಗಳೂರು : ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿವಿಲ್ ಕೋರ್ಟ್ ತೀರ್ಪು ಕಾಯ್ದಿರಿಸಿ ಕಲಾಪವನ್ನು ನ. 9ಕ್ಕೆ ಮುಂದೂಡಿದೆ.
ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಎಚ್ ಪಿ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ. ವಿಎಚ್ ಪಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆಗಸ್ಟ್ 27 ರಂದೇ ತೀರ್ಪು ಪ್ರಕಟಿಸಲಿದೆ ಎಂದು ಹೇಳಲಾಗಿತ್ತು. ಆದರೆ ಅ.17ಕ್ಕೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಮತ್ತೊಮ್ಮೆ ತೀರ್ಪು ಕಾಯ್ದಿರಿಸಿದ್ದು, ನ.9ಕ್ಕೆ ಕಲಾಪವನ್ನು ಮುಂದೂಡಲಾಗಿದೆ.
ಏನಿದು ವಿವಾದ? : ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆಗೆ ವಿಶ್ವ ಹಿಂದೂ ಪರಿಷತ್ ಮುಂದಾಗಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನೆ ವಿಧಾನದಿಂದ ಪರಿಶೀಲಿಸಿದಾಗ ದೈವ ಸಾನ್ನಿಧ್ಯ ಇರುವುದು ಗೋಚರವಾಗಿತ್ತು. ಆ ಬಳಿಕ ಈ ವಿಚಾರದಲ್ಲಿ ವಿಎಚ್ ಪಿ ಕಾನೂನು ಸಮರ ನಡೆಸಲು ನಿರ್ಧರಿಸಿ ಕೋರ್ಟ್ ಮೆಟ್ಟಿಲೇರಿತ್ತು.










