ಹಾಸನ : ವರ್ಷಕ್ಕೊಮ್ಮೆ ದೇವಾಲಯ ಬಾಗಿಲು ತೆರೆಯುವ ಹಾಸನಾಂಬೆ ದೇವಿ ದರ್ಶನಕ್ಕೆ ಇಂದು ತೆರೆ ಬೀಳಲಿದೆ.
ಕಳೆದ ಹದಿನೈದು ದಿನಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಾಸನಾಂಬೆಯನ್ನ ದರ್ಶನ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ನಿನ್ನೆ ತಡರಾತ್ರಿ ಹಾಸನದ ಅಧಿ ದೇವತೆ ಹಾಸನಾಂಬೆಯ ದರ್ಶನೋತ್ಸವದ ಜೊತೆಗೆ ನಡೆಯುವ ಸಿದ್ದೇಶ್ವರ ಜಾತ್ರೋ ಮಹೋತ್ಸವ ಹಾಗೂ ಕೆಂಡೋತ್ಸವ ಅದ್ದೂರಿಯಾಗಿ ಜರಗಿದೆ.
ಇಂದು ಬೆಳಗ್ಗೆ 7 ಗಂಟೆಯವರೆಗೂ ಸಾರ್ವಜನಿಕರಿಗೆ ದೇವಿ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದ್ದು, ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.










