ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಪುನೀತ್ ಕುಟುಂಬಕ್ಕೆ ಸರ್ಕಾರದಿಂದ ಆಹ್ವಾನ…

72
firstsuddi

ಬೆಂಗಳೂರು : ನಾಳೆ ವಿಧಾನಸೌಧದ ಮುಂಭಾಗ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರವು ಅಧಿಕೃತವಾಗಿ ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಿದೆ. ಸಚಿವರಾದ ಆರ್.ಅಶೋಕ್ ಮತ್ತು ಸುನೀಲ್ ಕುಮಾರ್ ಪುನೀತ್ ಮನೆಗೆ ಆಗಮಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರನ್ನು ಗೌರವಿಸುವ ಮೂಲಕ ಆಹ್ವಾನ ನೀಡಿದರು.

ನಾಳೆ ಸಂಜೆ 4 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ದಿವಂಗತ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿಧಾನಸಭೆ ಸ್ಪೀಕರ್ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಮಲಕಾಪೂರೆ, ಕರ್ನಾಟಕ ರತ್ನ ಪ್ರಶಸ್ತಿ ಉಸ್ತುವಾರಿ ಸಮಿತಿ ಅಧ್ಯಕ್ಷ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಲಿದ್ದಾರೆ.

ವಿಧಾನಸೌಧದಲ್ಲಿ ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಇರುವುದರಿಂದ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಆರ್. ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 7 ಎಸಿಪಿ, 16 ಇನ್ಸ್​​ಪೆಕ್ಟರ್​​​, 25 ಪಿಎಸ್​​ಐ, 300 ಕಾನ್​ಸ್ಟೆಬಲ್​, ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ ಪಡೆಯ 6 ತುಕಡಿಗಳ ನಿಯೋಜನೆ ಮಾಡಲಾಗಿದೆ.