ಚಿಕ್ಕಮಗಳೂರು : ಕನ್ನಡಪ್ರಭ ಪತ್ರಿಕೆಯ ವರದಿಗಾರರನ್ನು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ ಮುದ್ದೇಬಿಹಾಳದ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಘಟಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ.
ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಇಂದು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಮತ್ತು ಪತ್ರಕರ್ತರು ಈ ಸಂಬಂಧ ಮನವಿ ಸಲ್ಲಿಸಿ ಶಾಸಕರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು.
ಮುದ್ದೇಬಿಹಾಳ ತಾಲ್ಲೂಕಿನ ಕೃಷ್ಣಾ ತೀರದ ಗ್ರಾಮಗಳಿಗೆ ಮಂಜೂರಾಗಿದ್ದ ಹಣವನ್ನು ಬೇರೆ ಕಾಮಗಾರಿಗಳಿಗೆ ಬಳಸಿದ ಕುರಿತಂತೆ ಪತ್ರಿಕೆಯಲ್ಲಿ ಬಂದಿದ್ದ ವರದಿಯಿಂದ ಆಕ್ರೋಶಗೊಂಡ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಸ್ಥಳಿಯ ವರದಿಗಾರ ನಾರಾಯಣ್ ಮಾಯಾಚಾರಿ ಅವರಿಗೆ ಮತ್ತು ಸ್ಥಾನಿಕ ಸಂಪಾದಕ ಬ್ರಹ್ಮಾನಂದ ಅವರಿಗೆ ದೂರವಾಣಿ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.
ಈ ಪ್ರಕರಣದಿಂದಾಗಿ ಪತ್ರಕರ್ತರು ಕಾರ್ಯನಿರ್ವಹಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಪತ್ರಿಕಾ ವರದಿಗಾರರಿಗೆ ಜೀವ ಬೆದರಿಕೆ ಹಾಕುವ ಮೂಲಕ ಶಾಸಕರು ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ಶಾಸಕ ಎ.ಎಸ್.ಪಾಟೀಲ್ ಅವರ ಮೇಲೆ ಕೂಡಲೇ ಎಫ್ಐಆರ್ ದಾಖಲಿಸಿ ಕಠಿಣ ಕ್ರಮಕೈಗೊಳ್ಳಬೇಕು, ಶಾಸಕರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್.ಎಸ್.ಶ್ರೀಕಾಂತ್, ಕಡೂರು ಪತ್ರಕರ್ತರಾದ ಟಿ.ಲಕ್ಷ್ಮಣ್, ಬಿ.ಜಿ.ಶಿವಕುಮಾರ್, ಪಿ.ಶಿವಪ್ರಸಾದ್, ಬಿ.ರವಿಕುಮಾರ್, ಮಂಜಪ್ಪ, ಸಿ.ವಿ.ಬಾಲಕೃಷ್ಣ, ಬಸವರಾಜ್ ಹಾಜರಿದ್ದರು.










