ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಬಣಕಾರ್, ಎದುರಾಳಿಯಾಗಿದ್ದ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಣಕಾರ್ ಅವರನ್ನು ಸಮಾಧಾನಪಡಿಸಲು ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನದ ಜೊತೆಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕರನ್ನಾಗಿ ಮಾಡಲಾಗಿತ್ತು. ಆದರೆ, ಇದೀಗ ಬಣಕಾರ್ ಎಲ್ಲಾ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿದ್ದಾರೆ.
2 ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದ ಯು.ಬಿ.ಬಣಕಾರ್ 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ವಿರುದ್ಧ ಸೋಲುಕಂಡಿದ್ದರು.










