ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ : ಟ್ವೀಟ್ ಮೂಲಕ ಹೆಚ್‍ಡಿಕೆ ಸ್ಪಷ್ಟನೆ…

77
firstsuddi

ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಹೆಚ್‍.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್‍ನಲ್ಲೇನಿದೆ?
ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ.

ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಪ್ರವಾಸ ನಡೆಯುತ್ತಿತ್ತು, ಈ ವೇಳೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಹಾಗೂ ಮಾಸ್ತೇನಹಳ್ಳಿ ಗ್ರಾಮಕ್ಕೆ ರಥಯಾತ್ರೆ ಬರುತ್ತಿದ್ದ ವೇಳೆ ನೂರಾರು ಶಾಲಾ ಮಕ್ಕಳು ಕುಮಾರಸ್ವಾಮಿ ರಥಯಾತ್ರೆ ಬಳಿ ಬಂದು ಪ್ರತಿಭಟನೆ ಮಾಡಿದರು.

ಮಕ್ಕಳ ಪ್ರತಿಭಟನೆಗೆ ಮಣಿದ ಕುಮಾರಸ್ವಾಮಿ ಮಕ್ಕಳ ಜೊತೆ ಶಿಥಿಲವಾದ ಸರ್ಕಾರಿ ಶಾಲೆಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಣೆ ಮಾಡಿ ಆದಷ್ಟು ಬೇಗ ಶಾಲಾ ಕಟ್ಟಡ ಸರಿಪಡಿಸಿಕೊಡುವ ಭರವಸೆ ಕೊಟ್ಟು ವಾಪಸ್ಸಾಗುತ್ತಿದ್ದರು. ಈ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಅಲ್ಲದೇ ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.