ನವದೆಹಲಿ : ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಕಾಂಗ್ರೆಸ್‍ಗೆ ಕೇಂದ್ರ ಸೂಚಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೋವಿಡ್-19 ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯನ್ನು ಗಮನಿಸಿ ರಾಷ್ಟ್ರೀಯ ಹಿತಾಸಕ್ತಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಿ ಎಂದಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಜಾರಿಗೊಳಿಸಿ. ಭಾರತ್ ಜೋಡೋ ಯಾತ್ರೆಯಲ್ಲಿ ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ಮಾಂಡವಿಯಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಂಸದ ಸಂಸದ ಅಧೀರ್ ರಂಜನ್ ಚೌಧರಿ, ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿದ್ದಾರೆಯೇ? ಮನ್ಸುಖ್ ಮಾಂಡವಿಯಾ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಇಷ್ಟಪಡುತ್ತಿಲ್ಲ. ಜನರು ಈ ಯಾತ್ರೆಯನ್ನು ಇಷ್ಟಪಡುತ್ತಿದ್ದು, ಇದಕ್ಕಾಗಿಯೇ ಯಾತ್ರೆಯಲ್ಲಿ ಸೇರುತ್ತಿದ್ದಾರೆ. ಇದೀಗ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಂಡವಿಯಾ ಈ ಯೋಜನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಭಾರತ್ ಜೋಡೋ ಯಾತ್ರೆಯು ನಿನ್ನೆ ರಾಜಸ್ಥಾನದಲ್ಲಿ ಕೊನೆಯ ದಿನ ಸಾಗಿ, ಇಂದು ಹರಿಯಾಣ ಪ್ರವೇಶಿಸಿದೆ.










