ಹಾಸನ : ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ವಸತಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.
ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿ. ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್ ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ. ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಪ್ರಾಂಶುಪಾಲ ಶಿವಕುಮಾರ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಅರಕಲಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










