ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಫಾರ್ಮ್ ಹೌಸ್‍ನಲ್ಲಿ ವನ್ಯಜೀವಿಗಳು ಪತ್ತೆ…

54
firstsuddi

ದಾವಣಗೆರೆ : ಕಾಂಗ್ರೆಸ್ ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ದಾವಣಗೆರೆಯ ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್ ಹೌಸ್ ಮೇಲೆ ಸಿಸಿಬಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ಫಾರ್ಮ್ ಹೌಸ್‍ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಬೆಂಗಳೂರಿನ ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಬಂಧಿತನನ್ನ ವಿಚಾರಣೆಗೆ ಒಳಪಡಿಸಿದಾಗ ದಾವಣಗೆರೆಯಿಂದ ಚರ್ಮ ಹಾಗೂ ಕೊಂಬು ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದನು.

ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಎಸ್.ಎಸ್.ಮಲ್ಲಿಕಾರ್ಜುನ್ ಒಡೆತನದ ಫಾರ್ಮ್ ಹೌಸ್‍ ನಲ್ಲಿ ಜೀವಂತ ವನ್ಯಪ್ರಾಣಿಗಳು ಪತ್ತೆಯಾಗಿವೆ. ಫಾರ್ಮ್ ಹೌಸ್ ನಲ್ಲಿ ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದು, ಶೀಘ್ರವೇ ವಿಶೇಷ ತನಿಖಾಧಿಕಾರಿ ನೇಮಿಸಿ ಪ್ರಕರಣದ ತನಿಖೆ ಆರಂಭಿಸುವುದಾಗಿ ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.