ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ತಾಲೂಕಿನ ಕಡಕೊಳ ಬಳಿ ನಡೆದಿದೆ.
ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಬಂಡಿಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ (70), ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿಂದಾಲ್ ಮೋದಿ (35) ಹಾಗೂ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್ ಮೋದಿ (06) ಹಾಗೂ ಕಾರು ಚಾಲಕ ಸತ್ಯನಾರಾಯಣ ಇದ್ದರು.
ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಸೇರಿ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜೆಎಸ್ಎಸ್ ಆಸ್ಪತ್ರೆಯ ವೈದ್ಯ ಡಾ.ಮಧು ತಿಳಿಸಿದ್ದಾರೆ.










