ಬೆಂಗಳೂರು : ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿಯುತ್ತಿದ್ದೇನೆ. ನನಗೀಗ 90 ವರ್ಷ, ವಯಸ್ಸಿನ ಬಗ್ಗೆ ನಮಗೆ ಅರಿವು ಇರಬೇಕು. 90ರಲ್ಲಿ 50 ವರ್ಷದ ರೀತಿ ನಟನೆ ಮಾಡಲು ಆಗುವುದಿಲ್ಲ. ಅದಕ್ಕಾಗಿ ಕ್ರಮೇಣವಾಗಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಿವೃತ್ತಿ ಬಗ್ಗೆ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಎಸ್ಎಂ ಕೃಷ್ಣ ಅವರು, ನನ್ನ ರಾಜಕೀಯ ನಿವೃತ್ತಿ ಬಗ್ಗೆ ಹೈಕಮಾಂಡ್ ಗೆ ತಿಳಿಸುವ ಅಗತ್ಯವಿಲ್ಲ. ಏಕೆಂದರೆ ರಾಜಕೀಯದಲ್ಲಿ ಯಾರೂ ಪಿಂಚಣಿ ಕೊಡುವುದಿಲ್ಲ. ಆದ್ದರಿಂದ ನನ್ನ ನಿವೃತ್ತಿ ನಿರ್ಧಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದರು.
ಮೀಸಲಾತಿ ವಿಚಾರವಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರು ಕೇಳಿದಾಗ, ನನ್ನಲ್ಲಿ ಇದುವರೆಗೂ ಯಾರು ಈ ಬಗ್ಗೆ ಕೇಳಿಲ್ಲ. ಕೇಳಿದಾಗ ಸೂಕ್ತ ಸಲಹೆ ನೀಡುತ್ತೇನೆ ಎಂದರು.
ಎಸ್ ಎಂ ಕೃಷ್ಣ ಅವರು 1999ರಿಂದ 2004ರ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ್ದರು. ನಂತರ 2004ರಿಂದ 2008ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2009ರಿಂದ ಅಕ್ಟೋಬರ್ 2012ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2017ರ ಮಾರ್ಚ್ ನಲ್ಲಿ ಕಾಂಗ್ರೆಸ್ ತೊರೆದ ಎಂಎಸ್ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು.










