ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ – ಸ್ವಯಂ ಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್

48
firstsuddi

ಬೆಂಗಳೂರು : ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್ ಅರ್ಜಿ ಸಲ್ಲಿಸಲು ರಿಜಿಸ್ಟರ್ ಜನರಲ್ ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ.

ಘಟನೆಯೇನು? : ಜನವರಿ 10 ರಂದು ಬೆಂಗಳೂರಿನ ನಾಗವಾರ ರಿಂಗ್ ರೋಡ್ ನ ಎಚ್ ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕಂಬಿ ಬಿದ್ದು ತೇಜಸ್ವಿನಿ ಹಾಗೂ ಆಕೆಯ ಮಗು ವಿಹಾನ್ ಮೃತಪಟ್ಟಿದ್ದರು. ಬೈಕ್ ನಲ್ಲಿದ್ದ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಮತ್ತು ಮತ್ತೊಂದು ಹೆಣ್ಣು ಮಗು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಅವರು ದೂರು ನೀಡಿದ್ದು, ಸೈಟ್ ಇಂಜಿನಿಯರ್ಸ್, ಕಂಟ್ರ್ಯಾಕ್ಟರ್ಸ್, BMRCL ಆಫೀಸರ್ಸ್, ಸೈಟ್ ಇನ್ಚಾರ್ಜ್ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಗುತ್ತಿಗೆದಾರ, ಅಧಿಕಾರಿಗೆ BMRCL ನೋಟಿಸ್ ನೀಡಿದ್ದು, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಐಐಎಸ್ ಸಿಗೆ ಮನವಿ ಮಾಡಲಾಗಿದೆ.

ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. BMRCL  ಕೂಡ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ.