ಇಂದು ಯಾದಗಿರಿ, ಕಲಬುರಗಿಗೆ ಪ್ರಧಾನಿ ಮೋದಿ : ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ…

75
firstsuddi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಾಯು ಪಡೆಯ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿದ್ದಾರೆ. ಅಲ್ಲಿಂದ ವಾಯುಪಡೆಯ ಎಂಐ 17 ಹೆಲಿಕಾಪ್ಟರ್ ಮೂಲಕ ಯಾದಗಿರಿಯ ಕೊಡೇಕಲ್ ಗೆ ಬರಲಿದ್ದಾರೆ. ಕೊಡೆಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆಗೆ 2500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಯಂಚಾಲಿತ ಸ್ಕಾಡಾ ಗೇಟ್ ಲೋಕಾರ್ಪಣೆ ಮಾಡಲಿದ್ದಾರೆ. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಸೂರತ್-ಚೆನ್ನೈ ಎಕ್ಸ್ ಪ್ರೆಸ್ ವೇಗೆ ವೇಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1:15ಕ್ಕೆ ಕಲಬುರಗಿಯ ಮಳಖೇಡಾದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಜಿಲ್ಲೆಗಳ ತಾಂಡಾ ಮತ್ತು ಹಟ್ಟಿಗಳಲ್ಲಿ ವಾಸವಾಗಿರುವ 51 ಸಾವಿರ ಕುಟುಂಬಸ್ಥರಿಗೆ ಏಕಕಾಲದಲ್ಲಿ ಮೋದಿ ಹಕ್ಕು ಪತ್ರ ವಿತರಿಸಲಿದ್ದಾರೆ. ಮೋದಿ ಕಾರ್ಯಕ್ರಮಕ್ಕಾಗಿ 60 ಎಕರೆ ಪ್ರದೇಶದಲ್ಲಿ ಸಿದ್ಧತೆಗಳು ನಡೆದಿವೆ. ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.