ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ…

78
firstsuddi

ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ತಾಲೀಮು ಆರಂಭಿಸಿರುವ ಬಿಜೆಪಿ ಹೈಕಮಾಂಡ್ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಯನ್ನು ನೇಮಕ ಮಾಡಿದೆ.

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.

ಕಳೆದ ಬಾರಿಯೂ ಉಸ್ತುವಾರಿಯಾಗಿದ್ದ ಧರ್ಮೇಂದ್ರ ಪ್ರಧಾನ್ ಅವರನ್ನು ಹೈಕಮಾಂಡ್ ಈ ಬಾರಿಯೂ ಮುಂದುವರಿಸಿದ್ದು, ರಾಜ್ಯದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಸ್ಥಳೀಯ ಮಟ್ಟದ ರಾಜಕಾರಣ ಗೊತ್ತಿರುವ ಹಿನ್ನೆಲೆ ಅವರನ್ನು ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ಚುನಾವಣಾ ಪ್ರಚಾರ ಕಾರ್ಯಕ್ಕೆ ಮೊದಲ ಹಂತದ ಚಾಲನೆ ನೀಡಿದ್ದಾರೆ. ಇದೀಗ ಚುನಾವಣೆಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕಗೊಳಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಚುನಾವಣಾ ಪ್ರಕ್ರಿಯೆ ಸಂಬಂಧ ನಡೆಯುವ ಪ್ರಚಾರ ಕಾರ್ಯ ಸೇರಿ ಎಲ್ಲ ವಿಚಾರಗಳ ಬಗ್ಗೆ ಇನ್ಮುಂದೆ ಚುನಾವಣಾ ಉಸ್ತುವಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ.