ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು : ವಿಜಯ್‍ಕುಮಾರ್.

81
firstsuddi

ಚಿಕ್ಕಮಗಳೂರು: ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ತಾವು ಮುಂದೇನಾಗಬೇಕು ಎಂಬುದನ್ನು ನಿರ್ಧರಿಸಿ ಅದಕ್ಕೆ ಪೂರಕವಾಗಿ ಮುನ್ನಡೆಯಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಡಿ.ಎಲ್ ವಿಜಯ್‍ಕುಮಾರ್ ಸಲಹೆ ನೀಡಿದರು.

ನಗರದ ಮಲೆನಾಡು ವಿದ್ಯಾ ಸಂಸ್ಥೆಯಲ್ಲಿ ಇಂದು ಎಂಇಎಸ್ ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಎಂ.ಎಸ್. ಪದ್ಮಾವತಮ್ಮ ಎಂ.ಕೆ.ಸಾಂಬಶಿವ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ದೆಸೆಯಲ್ಲೇ ಮುಂದೇನಾಗಬೇಕು ಎಂಬುದನ್ನು ನಿರ್ಧರಿಸುವುದರಿಂದ ಅದೇ ದಿಕ್ಕಿನಲ್ಲಿ ಸಾಗಲು ಸಾಧ್ಯವಾಗುತ್ತದೆ. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಗಳು ಸಹಕಾರಿ ಎಂದ ಅವರು, ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಮಲೆನಾಡು ವಿದ್ಯಾ ಸಂಸ್ಥೆಯ ಖಜಾಂಚಿ ಡಿ.ಹೆಚ್.ನಟರಾಜ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪುಸ್ತಕ ಜ್ಞಾನದ ಜೊತೆಗೆ ಲೋಕಜ್ಞಾನ, ವ್ಯವಹಾರ ಜ್ಞಾನ, ಪರಿಜ್ಞಾನ ಮತ್ತು ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯೆ ಹಸೀನಾ ಬಾನು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‍ಕ್ರಾಸ್ ಘಟಕ, ಎಂಇಎಸ್ ಚೇಂಬರ್ ಆಫ್ ಕಾಮರ್ಸ್, ಕಲಾ ಹಾಗೂ ವಿಜ್ಞಾನ ಕೂಟಗಳನ್ನು ಸಮಾರಂಭದಲ್ಲಿ ಉದ್ಘಾಟಿಸಲಾಯಿತು.

ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಮಲೆನಾಡು ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಎಸ್.ಶಂಕರ ನಾರಾಯಣ ಭಟ್, ಕಚೇರಿ ವ್ಯವಸ್ಥಾಪಕಿ ಶ್ರೀಲಕ್ಷ್ಮಿ, ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಕೆ.ಎನ್.ಮಂಜುನಾಥ ಭಟ್ ಉಪಸ್ಥಿತರಿದ್ದರು.