ಚಾಮರಾಜನಗರ: ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ತಮಿಳುನಾಡು ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿಭಾಗವಾದ ಕಾವೇರಿ ವನ್ಯಜೀವಿ ವಿಭಾಗದ ಪಾಲಾರ್ ಅರಣ್ಯ ವಲಯದಲ್ಲಿ ತಮಿಳುನಾಡಿನ ಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿ, ವನ್ಯ ಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಕಂಡು ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಅರಣ್ಯ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಓರ್ವ ಬೇಟೆಗಾರ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಾವೇರಿ ನದಿಯಲ್ಲಿ ತಮಿಳುನಾಡು ಮೂಲದ ರಾಜು ಎಂಬವರ ಶವ ಪತ್ತೆಯಾಗಿದೆ. ಆ ವ್ಯಕ್ತಿಯ ವೈಯಕ್ತಿಕ ಮಾಹಿತಿ ಲಭ್ಯವಾಗಿಲ್ಲ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳು ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುಂಡಿನ ದಾಳಿ ವೇಳೆ ಅರಣ್ಯ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಮಹದೇಶ್ವರ ಬೆಟ್ಟದ ಪೊಲೀಸರು ಮಾಹಿತಿ ನೀಡಿದ್ದಾರೆ. ಕಾವೇರಿ ನದಿಯಲ್ಲಿ ಪತ್ತೆಯಾದ ಮೃತ ದೇಹವನ್ನು ತಮಿಳುನಾಡಿನ ಕೊಳತ್ತೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.










