ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, 17% ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿದೆ.
ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ.










