ಚಿಕ್ಕಮಗಳೂರು : ಸಂಭ್ರಮದಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ…

53
firstsuddi

ಚಿಕ್ಕಮಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಜಿಲ್ಲಾ ಸಹೋದರತ್ವ ಸಮಿತಿಯ ಸದಸ್ಯರು ನಗರದಲ್ಲಿ ಇಂದು ಸಡಗರ ಸಂಭ್ರಮದಿಂದ ಆಚರಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿ ಬೆಳಗ್ಗೆ ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಂಡ ಮಹಿಳೆಯರು ದಿನಾಚರಣೆ ಅಂಗವಾಗಿ ನಡೆಸಲಾದ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಕುಣಿದು ಕುಪ್ಪಳಿಸಿದರು. ಹಾಡು, ಹಸೆ, ನೃತ್ಯದ ಮೂಲಕ ಸಭಿಕರನ್ನು ರಂಜಿಸಿದರು.

ಇದೇ ವೇಳೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿರುವ ಪತ್ರಕರ್ತ ಕೆ.ಎನ್.ಚಂದ್ರಯ್ಯ, ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಮೂಡಿಗೆರೆಯ ಸಾವಿತ್ರಮ್ಮ, ನಿವೃತ್ತ ಪೌರಕಾರ್ಮಿಕರಾದ ಬಾಲನಾಗಮ್ಮ, ನಗರಸಭೆ ಮಾಜಿ ಅಧ್ಯಕ್ಷ ಅಕ್ಬರ್ ಅವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಪತ್ರಕರ್ತ ಕೆ.ಎನ್.ಚಂದ್ರಯ್ಯ, ತಾವು ಹೋರಾಟದ ಮನೋಭಾವವನ್ನು ಬಳಸಿಕೊಂಡ ಬಗೆಯನ್ನು ವಿವರಿಸಿ, ಮಹಿಳೆಯರು ವೈಚಾರಿಕತೆ, ಹೋರಾಟದ ಮನೋಭಾವ ಮತ್ತು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಿಳೆಯರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು. ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಸಹೋದರತ್ವ ಸಮಿತಿಯ ಸಂಸ್ಥಾಪಕ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಮಹಿಳೆಯರು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದನ್ನು ಕಲಿಯಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಸಮಿತಿಯ ಹಿರಿಯ ಸದಸ್ಯೆ ಶಾರದಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಆರ್.ಗಂಗಾಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ದಿನಾಚರಣೆ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಜಿಲ್ಲಾ ಸಹೋದರತ್ವ ಸಮಿತಿಯ ಸದಸ್ಯರಾದ ಪಿ.ವಿ.ತಂಬನ್, ಜಯಮ್ಮ, ಕಲಾವತಿ, ಸಾವಿತ್ರಿ,ರೇಖಾ, ಕೆ.ಎಸ್.ಮಂಜುಳಾ, ಪುಷ್ಪ ಉಪಸ್ಥಿತರಿದ್ದರು.