ಆಂಧ್ರಪ್ರದೇಶ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್‌ಗೆ ರಾಜೀನಾಮೆ…

60
firstsuddi

ನವದೆಹಲಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.

ಮಾರ್ಚ್ 11ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದ ರೆಡ್ಡಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಈ ಪತ್ರವನ್ನು ಸ್ವೀಕರಿಸಿ ಎಂದು ಮನವಿ ಮಾಡಿದ್ದರು.

ಆಂಧ್ರಪ್ರದೇಶವನ್ನು ವಿಭಜಿಸಿ ತೆಲಂಗಾಣವನ್ನು ರಚಿಸುವ ಅಂದಿನ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ನಿರ್ಧಾರ ವಿರೋಧಿಸಿ ರೆಡ್ಡಿ ಈ ಹಿಂದೆ 2014 ರಲ್ಲಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ತಮ್ಮದೇ ಆದ ರಾಜಕೀಯ ಪಕ್ಷ ‘ಜೈ ಸಮೈಕ್ಯಂಧ್ರ’ ಪಕ್ಷವನ್ನು ಸ್ಥಾಪಿಸಿದರು, ಆದರೆ 2018 ರಲ್ಲಿ ಕಾಂಗ್ರೆಸ್ ಗೆ ಮರಳಿದ್ದರು. ಇದೀಗ ಮತ್ತೆ ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ರೆಡ್ಡಿ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸದಸ್ಯ ಮಾಣಿಕಂ ಠಾಗೋರ್, ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು, ಆಂಧ್ರಪ್ರದೇಶ ಕಾಂಗ್ರೆಸ್ ಅನ್ನು ನಾಶಪಡಿಸಿದವರು ಈಗ ಬಿಜೆಪಿಗೆ ಸೇರಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.