ಬೆಂಗಳೂರು : ನಗರದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ನಿನ್ನೆ ಮಧ್ಯರಾತ್ರಿಯಿಂದ ಸೇವೆಯನ್ನು ಸ್ಥಗಿತಗೊಳಿಸಿರುವ ಆಟೋ ಚಾಲಕರು ಇಂದು ಮಧ್ಯರಾತ್ರಿಯವರೆಗೆ ನಗರದಲ್ಲಿ ಆಟೋರಿಕ್ಷಾ ಬಂದ್ ನಡೆಸಲು ನಿರ್ಧರಿಸಿದ್ದಾರೆ. ಸುಮಾರು 2 ಲಕ್ಷಕ್ಕೂ ಅಧಿಕ ಆಟೋಗಳು ಬಂದ್ ಗೆ ಬೆಂಬಲ ನೀಡಿವೆ.
ಬೈಕ್ ಟ್ಯಾಕ್ಸಿಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಸರ್ಕಾರಕ್ಕೆ ಆಟೋ ಚಾಲಕರು ಕೊಟ್ಟ ಗಡುವು ಮುಗಿದಿದೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ಸಂಗೊಳ್ಳಿ ಕ್ರಾಂತಿವೀರ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯಿಂದ ಚಾಲಕರು ಪಾದಯಾತ್ರೆ ಮೂಲಕ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಆಟೋ ಸೇವೆ ಬಂದ್ ನಿಂದಾಗಿ ಪ್ರಯಾಣಿಕರು ನಗರದಲ್ಲಿ ಸಂಚರಿಸಲು ಬಿಎಂಟಿಸಿ ಬಸ್, ಮೆಟ್ರೋ, ಖಾಸಗಿ ವಾಹನ, ಟ್ಯಾಕ್ಸಿ ಹಾಗೂ ಓಲಾ, ಊಬರ್ ವಾಹನಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿದೆ.










