ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 7 ಹೊಸ ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾನಿಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಪ್ರೊಫೆಸರ್ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ನೇಮಿಸಲಾಗಿದೆ. ಬಾಗಲಕೋಟೆಯ ತೋಟಗಾರಿಕೆ ವಿ.ವಿಯ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ, ಮೈಸೂರು ವಿಶ್ವವಿದ್ಯಾನಿಲಯದ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ ಅವರನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ. ಬೆಳಗಾವಿಯ ಕೆ.ಎಸ್.ಗೋಗಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ ಕುಲಪತಿಯನ್ನಾಗಿ, ಕುವೆಂಪು ವಿಶ್ವವಿದ್ಯಾನಿಲಯದ ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿ ಕುಲಪತಿಯನ್ನಾಗಿ ನೇಮಿಸಲಾಗಿದೆ.
ಬಾಗಲಕೋಟೆಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಹೆಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿ ನಿವೃತ್ತ ಪ್ರೊಫೆಸರ್ ಡಾ.ಟಿ ಸಿ ತಾರಾನಾಥ್ ಅವರನ್ನು ಹಾಸನ ವಿಶ್ವವಿದ್ಯಾನಿಲಯ ಕುಲಪತಿಗಳಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.










