ನಕಲಿ ಬಿಲ್ ಸೃಷ್ಟಿ : ಶಾಸಕ ನೆಹರು ಓಲೇಕಾರ್​​​ಗೆ ಹೈಕೋರ್ಟ್‍ನಿಂದ ರಿಲೀಫ್…

90
firstsuddi

ಬೆಂಗಳೂರು : ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್​ಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಶಾಸಕ ನೆಹರು ಓಲೇಕಾರ್ ದೋಷಿ ಎಂದು ತೀರ್ಮಾನಿಸಿ ಮತ್ತು ಅವರಿಗೆ ಎರಡು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ) 2023ರ ಫೆಬ್ರವರಿ 13ರಂದು ಆದೇಶ ಹೊರಡಿಸಿತ್ತು.

ತಮ್ಮನ್ನು ದೋಷಿಯಾಗಿ ತೀರ್ಮಾನಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಬಿಜೆಪಿ ಶಾಸಕ ನಹರು ಓಲೇಕಾರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಏನಿದು ಪ್ರಕರಣ :
2013ರಲ್ಲಿ ಹಾವೇರಿಯ ಶಶಿಧರ್ ಹಳ್ಳಿಕೇರಿ ಅವರು ಈ ಹಿಂದೆ ದೂರು ದಾಖಲಿಸಿ, 2008 ಮತ್ತು 2013ರ ಅವಧಿಯಲ್ಲಿ ಶಾಸಕರಾಗಿದ್ದ ಓಲೇಕಾರ್ ಅವರು ಸರ್ಕಾರದ ಸಿವಿಲ್ ಕೆಲಸಗಳನ್ನು ಬೇರೆಯವರಿಗೆ ದಕ್ಕದಂತೆ ತಮ್ಮ ಇಬ್ಬರು ಪುತ್ರರಿಗೆ ಕೊಡಿಸಿದ್ದರು ಎಂದು ಆರೋಪಿಸಿದ್ದರು. ಈ ಖಾಸಗಿ ದೂರನ್ನು ಆಧರಿಸಿ ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿತ್ತು.

ಇದರ ಅನ್ವಯ ಐಪಿಸಿ ಸೆಕ್ಷನ್ಗಳಾದ 197, 198, 409 ಮತ್ತು 420 ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಡಿ) ಜೊತೆಗೆ 13(2) ಅಡಿ ಪ್ರಕರಣ ದಾಖಲಿಸಿ, ಲೋಕಾಯುಕ್ತ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆಯ ಜೊತೆಗೆ ಶಾಸಕ ಓಲೇಕಾರ್​ಗೆ  2,000 ದಂಡ ವಿಧಿಸಿದ್ದು, ಅವರ ಇಬ್ಬರು ಪುತ್ರರಿಗೆ ತಲಾ 6,000 ಹಾಗೂ 4,5,7,8 ಮತ್ತು 9ನೇ ಆರೋಪಿಗಳಿಗೆ ತಲಾ 8,000 ರೂ. ದಂಡ ವಿಧಿಸಿತ್ತು. ದೋಷಿಗಳ ಪೈಕಿ ಓಲೇಕಾರ್ ಮಾತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೇಕಾರ್ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ ನೆಹರು ಓಲೇಕಾರ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ದೋಷಿಯಾಗಿ ತೀರ್ಮಾನಿಸಿರುವ ಆದೇಶದಕ್ಕೆ ತಡೆ ನೀಡಲು ಅರ್ಜಿಯಲ್ಲಿ ಕೋರಿದ್ದರು.