ಸಿಎಂ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡುತ್ತಿದ್ದಂತೆಯೇ ವಕೀಲರೊಬ್ಬರು ಕಿಚ್ಚ ಸುದೀಪ್ ಅವರ ಯಾವುದೇ ಚಲನಚಿತ್ರ, ಜಾಹೀರಾತುಗಳು, ಟಿವಿ ಶೋಗಳು ಪ್ರಸಾರ ಮಾಡದಂತೆ ತಡೆಯಬೇಕು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಪತ್ರದಲ್ಲೇನಿದೆ? : ಕನ್ನಡದ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವವರೆಗೂ ಅವರ ನಟನೆಯ ಯಾವುದೇ ಚಲನಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿವಿಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿವಿಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಹೀರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಮನವಿ ಮಾಡಿದ್ದಾರೆ.
ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನಚಿತ್ರಗಳು ಮತ್ತು ಟಿವಿಶೋಗಳು ಹಾಗೂ ಜಾಹೀರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ. ಆದ್ದರಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂಧಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು ಒಬ್ಬ ಜವಾಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.










