ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ಗುಡ್ಬೈ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 23 ಮಂದಿ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಹಾಗೂ ಮೂರು ಬಾರಿ ಗೆದ್ದ ಎಂ.ಪಿ.ಕುಮಾರಸ್ವಾಮಿಗೆ ಕೈ ತಪ್ಪಿದೆ. ಈ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ದೀಪಕ್ ದೊಡ್ಡಯ್ಯ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಘೋಷಿಸಿದೆ. ಇದರಿಂದ ಅಸಮಾಧಾನಗೊಂಡ ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂ.ಪಿ.ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಹೇಳಿದ್ದಾರೆ.










