ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ…

56
firstsuddi

ಬೆಂಗಳೂರು : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಇಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ.

ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.