ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕಿಲ್ಲ ಅನುಮತಿ – ಹೈಕೋರ್ಟ್‍ನಲ್ಲಿ ಅರ್ಜಿ ವಜಾ…

50
firstsuddi

ಬೆಂಗಳೂರು : ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಯಾಗಿರುವುದರಿಂದ ಧಾರವಾಡ ಪ್ರವೇಶಿಸಲು ಅನುಮತಿ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿ ವಿಚಾರಣೆ ವೇಳೆ ಧಾರವಾಡಕ್ಕೆ ಪ್ರವೇಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶ ಗೊತ್ತಿದ್ದರೂ ಹೈಕಮಾಂಡ್ ಅಲ್ಲಿಂದ ಚುನಾವಣೆಗೆ ಸ್ಪರ್ಧಿಸುವಂತೆ ನಿಮ್ಮ ಕಕ್ಷಿದಾರರಿಗೆ ಟಿಕೆಟ್ ಕೊಟ್ಟಿದ್ಯಾ ಎಂದು ವಿನಯ್ ಕುಲಕರ್ಣಿ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿ ಚಾಟಿ ಬೀಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಏ.15 ರಂದು ವಿನಯ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏಪ್ರಿಲ್ 18 ರಂದು ಧಾರವಾಡ ಪ್ರವೇಶಿಸದಂತೆ ಆದೇಶ ನೀಡಿತ್ತು.