ಪಾರದರ್ಶಕ, ನ್ಯಾಯ ಸಮ್ಮತ ಚುನಾವಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ…

100
firstsuddi

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪಾರದರ್ಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಇಂದು ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ರಾಜಕೀಯ ಪಕ್ಷಗಳು ಬಹುತೇಕ ವ್ಯಾಪಾರವನ್ನಾಗಿ ಮಾಡಿಕೊಂಡಿವೆ. ಹಣ, ಹೆಂಡ, ವಸ್ತುಗಳನ್ನು ನೀಡಿ ಮತದಾರರನ್ನು ಖರೀದಿ ಮಾಡುತ್ತಿವೆ. ಜಿಲ್ಲೆಯಲ್ಲಿ ಅಕ್ರಮ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಕೋಟಿಗಟ್ಟಲೆ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಹೊಸ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ರಾಜಕೀಯ ಪಕ್ಷಗಳ ಮುಖಂಡರು ರಾತ್ರಿ ವೇಳೆ ಗ್ರಾಮಗಳಿಗೆ ತೆರಳಿ ಸಮಸ್ಯೆ ಪರಿಹರಿಸುವುದು ಸೇರಿದಂತೆ ವಿವಿಧ ಆಮಿಷಗಳನ್ನೊಡ್ಡುತ್ತಿದ್ದಾರೆ. ಇದರಿಂದಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಿರುವ ಚುನಾವಣಾ ಅಕ್ರಮಗಳನ್ನು ತಡೆಗಟ್ಟಬೇಕು. ಪಾರದರ್ಶಕವಾದ, ನ್ಯಾಯ ಸಮ್ಮತವಾದ ಚುನಾವಣೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯಾಧ್ಯಕ್ಷ ಸೋಮಾ ನಾಯಕ್, ಎಂ.ಎಂ.ಗೋಪಾಲ್‍ಗೌಡ, ಎಂ.ಡಿ.ಎನ್.ಭಾಷಾ, ಫೈರೋಜ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಾಯಿನಾ ಭಾನು ಹಾಜರಿದ್ದರು.