ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ…

52
firstsuddi

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ವನಿಗಮ್ ಪಯೀನ್ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಸ್ಥಳಕ್ಕೆ ಭದ್ರತಾಪಡೆಗಳು ತೆರಳಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಯೋಧರು, ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ನಿನ್ನೆ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ನಡೆಸಿದ್ದಾರೆ.

ಹತ್ಯೆಯಾದ ಉಗ್ರರಿಂದ ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ಎಕೆ 47 ರೈಫಲ್ಸ್ ಹಾಗೂ ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.