ಯಾದಗಿರಿ: ಹೆರಿಗೆಗೆಂದು ಹೋಗಿದ್ದ ಗರ್ಭಿಣಿ ಮಗು ಸಹಿತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಗೂಡೂರು ಗ್ರಾಮದ ಸಂಗೀತಾ(20) ಮೃತ ಗರ್ಭಿಣಿ. ಮೇ 3ರಂದು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿ ನಾರ್ಮಲ್ ಹೆರಿಗೆ ಮಾಡುವುದಾಗಿ ವೈದ್ಯರು ಹೇಳಿದ್ದರು. ಇಡೀ ದಿನ ಆರೋಗ್ಯವಾಗಿಯೇ ಇದ್ದ ಸಂಗೀತಾ ನಿನ್ನೆ ಸಂಜೆ ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿ, ಆಸ್ಪತ್ರೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.










