ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವೇದಿಕೆ ಮೇಲೆ 30 ಗಣ್ಯರು ಮಾತ್ರ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗ ಶಾಸಕರು, ಶಾಸಕರ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದೆ. ವಿವಿಐಪಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಮಧ್ಯಭಾಗದಲ್ಲಿ ಸುಮಾರು 40 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದ್ದು, ಸ್ಟೇಡಿಯಂ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಒಳಭಾಗದಲ್ಲಿ ಹತ್ತು ಬೃಹತ್ ಎಲ್ಇಡಿ ಅಳವಡಿಸಲಾಗಿದ್ದು, ಸ್ಟೇಡಿಯಂ ಹೊರಗಡೆಯೂ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.
ಸೇಂಟ್ ಜೋಸೆಫ್ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಇತರೆ ವಾಹನ ಬಿಬಿಎಂಪಿ ಮುಖ್ಯ ಕಚೇರಿ ಆವರಣ, ಬಾದಾಮಿ ಹೌಸ್, ಯುನೈಟೆಡ್ ಮಿಷನ್ ಕಾಲೇಜು ಮೈದಾನದಲ್ಲಿ ನಿಲ್ಲಿಸಲು ಅವಕಾಶ ನೀಡಲಾಗಿದೆ. ಕಸ್ತೂರಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದ್ದು, ಅರಮನೆ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಸೂಚನೆ ನೀಡಲಾಗಿದೆ.










