ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ಇವರೆಲ್ಲರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಿದ್ದರಾಮಯ್ಯ ಅವರ ಸಂಪುಟ ದರ್ಜೆ ಸಚಿವರಾಗಿ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್. ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಲಕ್ಷಾಂತರ ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.










