ಬೆಂಗಳೂರು: ರಾಜ್ಯದಲ್ಲಿ ಹಾಲು, ಗ್ಯಾಸ್, ವಿದ್ಯುತ್ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯಾದ್ಯಂತ ಹೋಟೆಲ್ಗಳಲ್ಲಿ ಊಟ ತಿಂಡಿಗಳ ದರ ಹೆಚ್ಚಿಸಲು ನಗರದ ಹೋಟೆಲ್ ಗಳ ಮಾಲೀಕರ ಸಂಘ ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್, ಈಗ ಹಾಲಿನ ದರ ಏರಬಹುದು ಎಂಬ ಮುನ್ಸೂಚನೆ ಸಿಕ್ಕಿದೆ. ಇನ್ನೊಂದು ಕಡೆ ರೈಸ್ ಮಿಲ್ಗಳು ಅಕ್ಕಿ ದರವನ್ನು ಏರಿಸುವುದಾಗಿ ಹೇಳಿದ್ದಾರೆ. ಹೀಗಾಗಿ ನಾವು ದರ ಏರಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.
ಈಗಾಗಲೇ ದಿನಸಿ, ತರಕಾರಿಗಳ ದರ ಏರಿಕೆಯಾಗಿದೆ. ವಿದ್ಯುತ್ ದರ ಏರಿಕೆ ಎಲ್ಲರಿಗೂ ದೊಡ್ಡ ಶಾಕ್ ಕೊಟ್ಟಿದೆ. ಇದಕ್ಕೆ ಬ್ರೇಕ್ ಹಾಕದೇ ಇದ್ದರೆ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದ್ದಾರೆ.
ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆಯಿದೆ. ಹಾಲಿನ ದರ ಏರಿಕೆಯ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದರು.
ದರ ಏರಿಕೆಯ ಹೊಡೆತ ನಮ್ಮ ಉದ್ಯಮದ ಮೇಲೂ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಕೂಡ ಹೋಟೆಲ್ನಲ್ಲಿಯೂ ಕಾಫಿ, ತಿಂಡಿ, ಊಟದ ದರ ಏರಿಕೆ ಮಾಡಲೇ ಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಹೋಟೆಲ್ ಮಾಲೀಕರ ಸಂಘ, ದರ ಹೆಚ್ಚಳಕ್ಕೆ ಚರ್ಚೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.










