ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ. ಶಿವಶಂಕರ್ ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
ಶಿವಶಂಕರ್ ಅವರಿಗೆ ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿ, ಪೂಜೆ ಮಾಡಿದ ಬಳಿಕ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೂ, ಅವರು ಬದುಕುಳಿಯಲಿಲ್ಲ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಬಾಲನಟನಾಗಿಯೇ ರಂಗಭೂಮಿ ಪ್ರವೇಶಿಸಿದ್ದ ಅವರು ಅನೇಕ ನಾಟಕಗಳಲ್ಲಿ ಅಭಿನಯಿಸಿದ್ದರು. ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಕೆಲಸ ಮಾಡಿರುವ ಅವರು, ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.
ಸಿ.ವಿ. ಶಿವಶಂಕರ್ ಅವರ ಸಾಧನೆಯನ್ನು ಗುರುತಿಸಿ, 1991ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1994ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಸಿಂಗನಲ್ಲೂರು ಪುಟ್ಟಸ್ವಾಮಯ್ಯ ರಾಜ್ ಕುಮಾರ್ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.










