ಮಣಿಪುರ: ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣದಲ್ಲಿ 7ನೇ ಆರೋಪಿಯನ್ನು ಬಂಧಿಸಲಾಗಿದೆ.
ಮಣಿಪುರದ ರಾಜಧಾನಿ ಇಂಫಾಲದಿಂದ ಕೇವಲ 35 ಕಿ.ಮೀ. ದೂರದ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಿಂಸಾತ್ಮಕ ಗುಂಪುಗಳಿಂದ ಬುಡಕಟ್ಟು ಕುಕಿ ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅವರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದರು. ಈ ವೀಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ತೌಬಲ್ ಜಿಲ್ಲೆಯಲ್ಲಿ ಮತ್ತೋರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ 7 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.
ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ–ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.










