ಬೆಂಗಳೂರು: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆ ನಡೆದಿದೆ.
ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ಹಬ್ಬವೇ ವರಮಹಾಲಕ್ಷ್ಮಿ. ಬೆಂಗಳೂರಿನ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಾಭಿಷೇಕ ನೇರೆವೇರುತ್ತಿದ್ದು, ವಿಶೇಷ ಅಲಂಕಾರದ ನಂತರ ಬರುವ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್ನ ಲಕ್ಷ್ಮಿ ದೇವಸ್ಥಾನ, ಕೆಆರ್ಮಾರ್ಕೆಟ್ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.
ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಬಾಳೆಎಲೆ, ಹೂವು, ಹಣ್ಣು ಹಾಗೂ ಇತರ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಮಾರುಕಟ್ಟೆಗಳಲ್ಲಿ ಜನಜಂಗುಳಿ ಇದೆ. ಹಬ್ಬದ ಸಂಭ್ರಮದಲ್ಲಿದ್ದವರಿಗೆ ಬೆಲೆಯೇರಿಕೆಯ ಬಿಸಿ ತಟ್ಟಿದೆ.










