ಜೈಪುರ್: ಮಹಿಳೆಯೊಬ್ಬರನ್ನು ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಸಾರ್ವಜನಿಕವಾಗಿ ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ, ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಆಕೆಯ ಪತಿ ಮತ್ತು ಅತ್ತೆ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಎಫ್ಐಆರ್ ದಾಖಲಾಗಿದ್ದು, ತನಿಖೆಗಾಗಿ ಆರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಪ್ರತಾಪ್ಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.










