ಚಿತ್ರದುರ್ಗ: ಇಂದು ಬೆಳಗ್ಗೆ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಶಂಶುದ್ದೀನ್(40), ಮಲ್ಲಿಕಾ(37), ಖಲೀಲ್(42), ತಬ್ರೇಜ್(13) ಮೃತ ದುರ್ದೈವಿಗಳು. ನರ್ಗೀಸ್, ರೆಹಾನ್, ರೆಹಮಾನ್ ಗಾಯಾಳುಗಳು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.










