ಕೃಷಿ ಸಂಶೋಧನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ ಸಿದ್ದರಾಮಯ್ಯ.

48
firstsuddi

ಬೆಂಗಳೂರು: ಕೃಷಿ ಸಂಶೋಧನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಹೈದರಾಬಾದ್‌ನ ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ (ಮ್ಯಾನೇಜ್) ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ದೇಸಿ ಸಮ್ಮೇಳನವನ್ನ ಉದ್ಘಾಟಿಸಿ ಅವರು ಮಾತನಾಡಿದರು.

ಜನಸಂಖ್ಯೆಯಲ್ಲಿ ನಾವು ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದ್ದೇವೆ. ಆದರೆ ಅಭಿವೃದ್ಧಿ, ತಲಾ ಆದಾಯ, ಜಿಡಿಪಿಯಲ್ಲಿ ಚೀನಾ ನಮಗಿಂತ ಮುಂದಿದೆ. ಬೆಳೆಯುತ್ತಿರುವ ಜನಸಂಖ್ಯೆಯ ಅಗತ್ಯಗಳನ್ನು ಪೂರೈಸಲು ಆಹಾರ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಕೃಷಿ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೃಷಿ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮತ್ತು ಸಂಶೋಧನೆಯು ಗುಣಾತ್ಮಕವಾಗಬೇಕು ಮತ್ತು ಆಹಾರ ಉತ್ಪಾದನೆಯನ್ನು ಹೆಚ್ಚಿಸಬೇಕು. ಕರ್ನಾಟಕವು ಅತಿ ಹೆಚ್ಚು ಒಣ ಕೃಷಿ ಭೂಮಿಯನ್ನು ಹೊಂದಿದ್ದು, ಹವಾಮಾನ ಬದಲಾವಣೆಯಿಂದಾಗಿ ನಿರಂತರವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯನ್ನು ಎದುರಿಸುತ್ತಿದೆ, ಈ ನಿಟ್ಟಿನಲ್ಲಿ ಕೃಷಿ ವಿವಿಗಳು ಬೆಳೆಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಬೇಕು ಎಂದು ಹೇಳಿದರು.

ಕೃಷಿ ವಿಶ್ವವಿದ್ಯಾನಿಲಯಗಳು ರೈತರ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳಲು ಲ್ಯಾಬ್‌ನಿಂದ ಭೂಮಿ ಮತ್ತು ಭೂಮಿಯಿಂದ ಲ್ಯಾಬ್ ಪರಿಕಲ್ಪನೆಗಳ ಆಧಾರದ ಮೇಲೆ ವೈಜ್ಞಾನಿಕ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಂಶೋಧನೆ-ಅಧ್ಯಯನ ಮತ್ತು ವಿಸ್ತರಣಾ ಕಾರ್ಯಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಕೃಷಿ ವಿಶ್ವವಿದ್ಯಾಲಯಗಳು ಅಭಿವೃದ್ಧಿಪಡಿಸಿರುವ ಹೊಸ ತಳಿಗಳು ರೈತರಿಗೆ ತಲುಪಿವೆಯೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.