ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ: ನಿಖಿಲ್ ಸ್ಪಷ್ಟನೆ…

69
firstsuddi

ನಟ ನಿಖಿಲ್ ಕುಮಾರ್ ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.