ಚಿಕ್ಕಮಗಳೂರು: ಕಾಫಿನಾಡ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ 3 ದಿನಗಳ ಕಾಲ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ.
ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಚಂದ್ರದ್ರೋಣ ಪರ್ವತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್ 5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ದತ್ತಪೀಠಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










