ಹಾಸನ: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿನ್ನೆ ನಿವೃತ್ತಿ ಘೋಷಿಸಿದ್ದಾರೆ.
ಹಾಸನದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಅಧ್ಯಯನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಸದಾನಂದಗೌಡ ಅವರು ಪ್ರಸ್ತುತ ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಹೇಳಿದರು.
2021ರಲ್ಲಿ ಕೇಂದ್ರ ಸಚಿವರ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಅವರು ಕೇಂದ್ರ ಸಚಿವ ಸ್ಥಾನ ತ್ಯಜಿಸಿದ್ದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು.










