ಗದಗ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿರುವ ಶೌಚಾಲಯಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕಳಸಾಪುರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಿಂದ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೋರ್ವ ಶಶಿ ಪಾಟೀಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರ್‌ನಲ್ಲಿರುವ ಏರ್‌ಬ್ಯಾಗ್ ಓಪನ್ ಆಗಿದ್ದರೂ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.










